
ಬಾದಾಮಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ರೈತರ ಅನಿರ್ದಿಷ್ಟಾವಧಿ ಧರಣಿ
ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಭಾರತೀಯ ಕಿಸಾನ್ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯ ಕೃಷಿಕರು ಸೇರಿ ಬಾದಾಮಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು. 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದಾಗಿ ತಾಲೂಕಿನಾದ್ಯಂತ ರೈತರು ತೀವ್ರ ಬೆಳೆ ನಷ್ಟ ಎದುರಿಸುತ್ತಿದ್ದಾರೆ. ಸಜ್ಜೆ, ಹೆಸರು, ತೊಗರಿ, ಮೆಕ್ಕೆಜೋಳ, ಸೂರ್ಯಕಾಂತಿ, ಕಬ್ಬು ಮತ್ತು ಹತ್ತಿ ಬೆಳೆದ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ರಾಜ್ಯ ಸರ್ಕಾರವು ಇತ್ತೀಚೆಗೆ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದರೂ, ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿರುವ ಬಾದಾಮಿ ತಾಲೂಕನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಸ್ಥಳೀಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರು ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಸಿ, ರಾಮದುರ್ಗ ಕ್ರಾಸ್ ಮತ್ತು ತಹಶೀಲ್ದಾರ್ ಕಚೇರಿ ಎದುರು ಧರಣಿ ಕುಳಿತರು.
ಧರಣಿ ಸ್ಥಳಕ್ಕೆ ಬಾದಾಮಿ ತಹಶೀಲ್ದಾರ್, ಕೃಷಿ ಸಹಾಯಕ ನಿರ್ದೇಶಕರಾದ ಮಹೇಶ ತಿರಕಣ್ಣವರ ಹಾಗೂ ತೋಟಗಾರಿಕೆ ಅಧಿಕಾರಿ ಬಿ.ಪಿ. ಪಾಟೀಲ ಭೇಟಿ ನೀಡಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಮುಂದಿನ ಮೂರು ದಿನಗಳಲ್ಲಿ ಬೆಳೆ ಹಾನಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಬರಗಾಲ ಘೋಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು. ಆದರೆ ಅಧಿಕೃತ ಆದೇಶ ಹೊರಬರುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದು, ಬೇಡಿಕೆ ಈಡೇರದಿದ್ದರೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸುವುದಾಗಿ ಎಚ್ಚರಿಸಿದ್ದಾರೆ.


