
ಬಾದಾಮಿಯಲ್ಲಿ ₹16 ಕೋಟಿ ವೆಚ್ಚದ ನೂತನ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಶಂಕುಸ್ಥಾಪನೆ
ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಚಾಲುಕ್ಯರ ರಾಜಧಾನಿ ಹಾಗೂ ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಬಾದಾಮಿ ನಗರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಾಗಲಕೋಟೆ ವಿಭಾಗ ಹಾಗೂ ಲೋಕೋಪಯೋಗಿ ಇಲಾಖೆಯ (PWD) ಜಂಟಿ ಸಹಯೋಗದೊಂದಿಗೆ ನಿರ್ಮಾಣಗೊಳ್ಳಲಿರುವ ₹16 ಕೋಟಿ ವೆಚ್ಚದ ನೂತನ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಭೂಮಿಪೂಜೆ ನೆರವೇರಿಸಿದರು.
ಬಾದಾಮಿಯ ಗುಹಾಂತರ ದೇವಾಲಯಗಳು ಹಾಗೂ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ಪ್ರತಿದಿನ ದೇಶ-ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಸ್ಥಳೀಯ ಪ್ರಯಾಣಿಕರ ಜೊತೆಗೆ ಪ್ರವಾಸಿಗರಿಗೂ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ ₹9.97 ಕೋಟಿ ವೆಚ್ಚದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಲಿವೆ. ನೂತನ ಕಟ್ಟಡ ನಿರ್ಮಾಣದ ಹಿನ್ನೆಲೆಯಲ್ಲಿ ಹಳೆಯ ಬಸ್ ನಿಲ್ದಾಣ ಕಟ್ಟಡವನ್ನು ತೆರವುಗೊಳಿಸಲಾಗುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಪಂಚಾಯಿತಿ ವಸತಿ ನಿಲಯದ ಆವರಣದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
ನೂತನವಾಗಿ ನಿರ್ಮಾಣವಾಗಲಿರುವ ಹೈಟೆಕ್ ಬಸ್ ನಿಲ್ದಾಣದಲ್ಲಿ ಮಹಿಳೆಯರ ವಿಶ್ರಾಂತಿ ಕೊಠಡಿ, ಉಪಾಹಾರ ಗೃಹ, ಆಧುನಿಕ ಟಿಕೆಟ್ ಕೌಂಟರ್, ಎಟಿಎಂ ಕೇಂದ್ರಗಳು, ವಾಣಿಜ್ಯ ಮಳಿಗೆಗಳು, ಆಡಳಿತ ಕಚೇರಿ ಸಂಕೀರ್ಣ, ಶೌಚಾಲಯಗಳು ಹಾಗೂ ಸುಸಜ್ಜಿತ ವಾಹನ ನಿಲುಗಡೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಪ್ರವಾಸೋದ್ಯಮ ಮತ್ತು ಸಾರಿಗೆ ಕ್ಷೇತ್ರಗಳ ಮೂಲಸೌಕರ್ಯ ವೃದ್ಧಿಯಿಂದ ಬಾದಾಮಿ ತಾಲೂಕಿನ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.


