
ಜಯನಗರದಲ್ಲಿ ಸಾರ್ವಜನಿಕವಾಗಿ ಚಾಕು ಪ್ರದರ್ಶಿಸಿ ಬೆದರಿಕೆ: ಯುವಕನನ್ನು ಬಂಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರಿನ ಜಯನಗರ 9ನೇ ಬ್ಲಾಕ್ನ ಸಾರ್ವಜನಿಕ ರಸ್ತೆಯಲ್ಲಿ ಮಾರಕ ಚಾಕು ಪ್ರದರ್ಶಿಸಿ ವ್ಯಕ್ತಿಯೊಬ್ಬನಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತಿಲಕ್ ನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಆಯುಧ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ವಿಡಿಯೋ ಗಮನಿಸಿದ ಪೊಲೀಸರು ತಕ್ಷಣವೇ ಕಾರ್ಯಾಚರಣೆಗೆ ಇಳಿದಿದ್ದರು.
ಮೊಬೈಲ್ ಶೋರೂಂ ಒಂದರ ಮುಂಭಾಗ ಈ ಘಟನೆ ನಡೆದಿದ್ದು, ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ದೂರುದಾರರೊಂದಿಗೆ ಗಲಾಟೆ ಮಾಡಿಕೊಂಡ ಆರೋಪಿ ಸಾರ್ವಜನಿಕ ರಸ್ತೆಯಲ್ಲಿ ಚಾಕು ಬೀಸಿ ಬೆದರಿಕೆ ಹಾಕಿದ್ದ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ಕು ಗಂಟೆಗಳ ಅವಧಿಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಂಧನದ ವೇಳೆ ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಳ್ಳಲಾಗಿದ್ದು, ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


