
ಕಡಬದ ಬಿಳಿನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಶನಿವಾರ ತಡರಾತ್ರಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ ರಸ್ತೆಯ ಎರುಮೈಲ್ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಎರುಮೈಲ್ ಬಳಿ ಸಂಚರಿಸುತ್ತಿದ್ದಾಗ ಮುಂಭಾಗದಿಂದ ದಟ್ಟ ಹೊಗೆ ಮತ್ತು ಬೆಂಕಿಯ ಕಿಡಿಗಳು ಹೊರಹೊಮ್ಮುತ್ತಿರುವುದನ್ನು ಗಮನಿಸಿದ ಚಾಲಕ, ತಕ್ಷಣ ರಸ್ತೆ ಬದಿಗೆ ಬಸ್ ನಿಲ್ಲಿಸಿ ಪ್ರಯಾಣಿಕರಿಗೆ ಕೂಡಲೇ ಕೆಳಗಿಳಿಯುವಂತೆ ಎಚ್ಚರಿಸಿದರು.
ಚಾಲಕನ ಸೂಚನೆ ಬೆನ್ನಲ್ಲೇ ಬಸ್ನಲ್ಲಿದ್ದ ಎಲ್ಲಾ 37 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದರು. ಅವರು ಹೊರಬಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಗೆ ವ್ಯಾಪಿಸಿ, ವಾಹನ ಸಂಪೂರ್ಣವಾಗಿ ಭಸ್ಮವಾಯಿತು. ಸುದ್ದಿ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಪ್ರಯಾಣಿಕರ ಜೀವ ಉಳಿಸಿದ ಚಾಲಕನ ಕಾರ್ಯಕ್ಕೆ ಕಡಬ ಭಾಗದ ಸಾರ್ವಜನಿಕರು ಹಾಗೂ ಪ್ರಯಾಣಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


