
ಕೆ.ಆರ್.ಪೇಟೆಯ ಶೆಟ್ಟಿಹಳ್ಳಿಯಲ್ಲಿ ಮಂಡ್ಯ ಜಿಲ್ಲೆಯ ಮೊದಲ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕ ಉದ್ಘಾಟನೆ
ಗ್ರಾಮೀಣ ನೈರ್ಮಲ್ಯ ಮತ್ತು ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಮಂಡ್ಯ ಜಿಲ್ಲೆಯ ಪ್ರಥಮ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕವನ್ನು ಕೃಷ್ಣರಾಜಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಹಳ್ಳಿಯಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಯಿತು. ಸ್ವಚ್ಛ ಭಾರತ್ ಮಿಷನ್ (ಗ್ರಮೀಣ) ಯೋಜನೆಯಡಿ ಈ ಆಧುನಿಕ ಸಂಸ್ಕರಣಾ ಘಟಕವನ್ನು ಸ್ಥಾಪಿಸಲಾಗಿದೆ.
ಘಟಕವನ್ನು ಉದ್ಘಾಟಿಸಿ ಮಾತನಾಡಿದ ಕೆ.ಆರ್.ಪೇಟೆ ಶಾಸಕ ಹೆಚ್.ಟಿ. ಮಂಜು, ಪ್ಲಾಸ್ಟಿಕ್ ತ್ಯಾಜ್ಯವನ್ನು ಬೇಕಾಬಿಟ್ಟಿ ಬಿಸಾಡುವುದರಿಂದ ಮತ್ತು ಸುಡುವುದರಿಂದ ಕೃಷಿ ಭೂಮಿ, ಜಲಮೂಲಗಳು ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ತೀವ್ರ ಹಾನಿಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರತಿಯೊಬ್ಬ ನಾಗರಿಕರೂ ಮನೆಯಲ್ಲೇ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ನೀಡಬೇಕು ಎಂದು ಮನವಿ ಮಾಡಿದರು. ಸ್ವಸಹಾಯ ಸಂಘಗಳ ಮಹಿಳೆಯರು ಈ ಘಟಕದ ಸಂಪೂರ್ಣ ನಿರ್ವಹಣೆ ಮತ್ತು ವಾಹನ ಚಾಲನೆಯ ಹೊಣೆ ಹೊತ್ತು ಮಾದರಿಯಾಗಿದ್ದಾರೆ ಎಂದು ಪ್ರಶಂಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ಶೆಟ್ಟಿಹಳ್ಳಿ ಘಟಕವು ಇಡೀ ತಾಲೂಕಿನ ಇತರ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗಲಿದೆ ಎಂದರು. ಗ್ರಾಮಗಳಲ್ಲಿ ಚರಂಡಿ ಕಟ್ಟಿಕೊಳ್ಳುವುದನ್ನು ತಡೆಯಲು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ಪುನರ್ಬಳಕೆ ಮಾಡಲು ಹಾಗೂ ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಈ ಯೋಜನೆ ಅತ್ಯಂತ ನೆರವಾಗಲಿದೆ.


