
ರಾಯಬಾಗ ತಾಲೂಕಿನ ಸುಟ್ಟಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ (15) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳ ಮೂಡಿಸಿದೆ. ಸಮೀಪದ ನಿಡಗುಂದಿ ಗ್ರಾಮದ ನಿವಾಸಿಯಾಗಿದ್ದ ಬಾಲಕ ಗೌತಮ್ ವಸತಿ ನಿಲಯದ ಆವರಣದಲ್ಲಿ ಮೃತಪಟ್ಟಿರುವುದು ಕಂಡುಬಂದಿದ್ದು, ಸಾವಿನ ಕುರಿತು ಪೋಷಕರು ಮತ್ತು ಸ್ಥಳೀಯರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.
ಘಟನೆಯ ನಂತರ ಮೃತ ಬಾಲಕನ ಕುಟುಂಬಸ್ಥರು ಕುಡಚಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಸತಿ ನಿಲಯದ ಸಿಬ್ಬಂದಿಯ ಹಲ್ಲೆಯಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರು ಹಾಗೂ ತಾಲೂಕು ಆಡಳಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ನಿಡಗುಂದಿ ಗ್ರಾಮಕ್ಕೆ ತೆರಳಿ ಮೃತ ಗೌತಮ್ ಕುಟುಂಬಕ್ಕೆ ಸಾಂತ್ವನ ಹೇಳಿ ತಾತ್ಕಾಲಿಕ ಧನಸಹಾಯ ವಿತರಿಸಿದರು. ನಂತರ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು, ಶಿಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದರು.
ಸ್ಥಳೀಯ ಸಾಮಾಜಿಕ ಸಂಸ್ಥೆಗಳು ಹಾಗೂ ವಿವಿಧ ಸಮಿತಿಗಳ ನಾಯಕರು ಪ್ರಕರಣದ ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕೆಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಶಾಲೆಯ ಸಿಬ್ಬಂದಿ ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಈ ದುರಂತವು ರಾಯಬಾಗ ತಾಲೂಕಿನ ಸಾರ್ವಜನಿಕರಲ್ಲಿ ವಸತಿ ಶಾಲೆಗಳ ಸುದೃಢ ಭದ್ರತೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಗಂಭೀರ ಚಿಂತನೆಗೆ ಹಾದಿಮಾಡಿಕೊಟ್ಟಿದೆ.


