
ಸಿಂಧನೂರು: ₹9 ಕೋಟಿ ವೆಚ್ಚದ ಪಿಡಬ್ಲ್ಯುಡಿ ಕ್ಯಾಂಪ್-ಮಾಡಸಿರವಾರ ರಸ್ತೆ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ
ಸಿಂಧನೂರು ನಗರದ ಪಿಡಬ್ಲ್ಯುಡಿ ಕ್ಯಾಂಪ್ನಿಂದ ಮಾಡಸಿರವಾರ ಗ್ರಾಮದವರೆಗಿನ ಒಂಬತ್ತು ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಜೋಳದರಾಶಿ ಆಂಜನೇಯ ದೇವಸ್ಥಾನದ ಬಳಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಪಿಡಬ್ಲ್ಯುಡಿ ಕ್ಯಾಂಪ್ನಿಂದ ಮಾಡಸಿರವಾರವರೆಗಿನ ರಸ್ತೆ ಬಹುದಿನಗಳಿಂದ ತೀವ್ರ ಹಾಳಾಗಿದ್ದು, ಸಾರ್ವಜನಿಕರು ಹಾಗೂ ರೈತರು ಪ್ರಯಾಣಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಸಾರ್ವಜನಿಕರ ಹಿತದೃಷ್ಟಿಯಿಂದ ಲೋಕೋಪಯೋಗಿ ಇಲಾಖೆಯಿಂದ ₹9 ಕೋಟಿ ಅನುದಾನದಲ್ಲಿ ಡಾಂಬರೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದರು.
ರಸ್ತೆ ನಿರ್ಮಾಣದಲ್ಲಿ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಬೇಕು ಮತ್ತು ಕಾಮಗಾರಿ ಕುರಿತು ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಶಾಸಕರು ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಸುಡಾ ಅಧ್ಯಕ್ಷ ಬಾಬುಗೌಡ ಬಾದರ್ಲಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ತಾಪಂ ಮಾಜಿ ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ ಹಾಗೂ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೂಗಪ್ಪ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.


