
ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ಬಾಲಕರ ಮೇಲೆ ಹಲ್ಲೆ ನಡೆಸಿದ ಅಂಗಡಿ ಮಾಲೀಕನ ಬಂಧನ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ತಿಂಡಿ ಹಣ ಪಾವತಿ ಮತ್ತು ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರ ಮೇಲೆ ಹಲ್ಲೆ ನಡೆಸಿದ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಪೊಲೀಸರು ನೀಡಿರುವ ಮಾಹಿತಿಯಂತೆ, ಅಂಗಡಿ ಮಾಲೀಕ ಅಶೋಕ್ ಪತ್ತಾರ್ ಎಂಬಾತ ತನ್ನ ಅಂಗಡಿಯಿಂದ ಚಾಕೊಲೇಟ್ ಕಳ್ಳತನ ಮಾಡಿದ್ದಾರೆ ಮತ್ತು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಬಾಲಕರ ಮೇಲೆ ಪೈಪ್ನಿಂದ ಹಲ್ಲೆ ನಡೆಸಿದ್ದನೆಂದು ತಿಳಿದುಬಂದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ಹಾಗೂ ಮಕ್ಕಳ ಹಕ್ಕುಗಳ ಹೋರಾಟಗಾರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿಡಿಯೋ ವೈರಲ್ ಬೆನ್ನಲ್ಲೇ ಬಾಲಕನ ತಂದೆ ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಆಲಮೇಲ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗಾಯಗೊಂಡ ಬಾಲಕರಿಗೆ ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಲಕರ ವಿಷಯದಲ್ಲಿ ಕಾನೂನು ಕೈಗೆತ್ತಿಕೊಳ್ಳದೆ ಸೂಕ್ತ ಕಾನೂನು ಮಾರ್ಗ ಅನುಸರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.


